ಕೋಲಾರ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಈ ದುರಂತವು ಜಿಲ್ಲೆಯ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಇದೇ ಗ್ರಾಮದ ಸತೀಶ್ (18) ಮತ್ತು ಓರ್ವ ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದೆ.
ಘಟನೆಯ ವಿವರ
ಸತೀಶ್ ಮತ್ತು ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇಬ್ಬರ ಪ್ರೀತಿಗೆ ಎರಡೂ ಕಡೆಯ ಕುಟುಂಬದ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ವಿರೋಧದಿಂದ ತೀವ್ರವಾಗಿ ಮನನೊಂದ ಪ್ರೇಮಿಗಳು, ಗ್ರಾಮದ ಬಳಿಯ ರೈಲ್ವೇ ಹಳಿಗಳ ಬಳಿ ತಮ್ಮ ಬೈಕ್ ನಿಲ್ಲಿಸಿ, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ದುರ್ಘಟನೆಯಲ್ಲಿ ರೈಲಿಗೆ ಸಿಲುಕಿ ಇಬ್ಬರ ದೇಹಗಳು ಛಿದ್ರ ಛಿದ್ರವಾಗಿವೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.