ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಮಾತೃ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಅಡ್ವೋಕೇಟ್ ಜನರಲ್ ಸ್ಪಷ್ಟನೆ
ವಿಚಾರಣೆ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ (AG) ಶಶಿಕಿರಣ ಶೆಟ್ಟಿ ಅವರು ಸರ್ಕಾರದ ನಿಲುವನ್ನು ವಿವರಿಸಿದರು. "ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಪ್ರಯಾಣಿಕರ ಸಾಗಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ, ಕೇವಲ ಡೆಲಿವರಿ ಉದ್ದೇಶಗಳಿಗಾಗಿ ಬಳಸಲು ಅವಕಾಶ ನೀಡಲಾಗಿದೆ. ಡೆಲಿವರಿ ವಾಹನಗಳಿಗೆ 'ಟ್ಯಾಕ್ಸಿ' ಎಂದು ನೋಂದಣಿ ಮಾಡಿಸುವ ಅಗತ್ಯವಿಲ್ಲ. ಈ ಸಂಬಂಧ ಸರ್ಕಾರವು ಈಗಾಗಲೇ ನೀತಿಯನ್ನು ರೂಪಿಸಿದೆ" ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದರು.
ಆದರೆ, ನೀತಿ ರೂಪಿಸುವ ಕಾರ್ಯದಲ್ಲಿನ ವಿಳಂಬಕ್ಕೆ ಹೈಕೋರ್ಟ್ ವಿಭಾಗೀಯ ಪೀಠವು ಅಸಮಾಧಾನ ವ್ಯಕ್ತಪಡಿಸಿತು.
ಪ್ರಕರಣದ ಹಿನ್ನೆಲೆ (Bike Taxi Controversy)
ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರ, ಹಳದಿ ನೋಂದಣಿ ಫಲಕ (Yellow Board) ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗಳಿಗೂ ಅನುಮತಿ ನೀಡಬೇಕು ಎಂದು ಕೋರಿ ಉಬರ್ ಇಂಡಿಯಾ, ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್ (ರ‍್ಯಾಪಿಡೋ) ಮತ್ತು ಎಎನ್‌ಐ ಟೆಕ್ನಾಲಜೀಸ್ (ಓಲಾ) ಸಂಸ್ಥೆಗಳು ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಿದ್ದವು.
ಈ ಅರ್ಜಿಗಳ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠವು ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳು ಹೈಕೋರ್ಟ್‌ನ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದವು.
