ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಖರ್ಗೆ, ಬೆಂಗಳೂರಿನ ಜನಸಂಖ್ಯೆಯಲ್ಲಿ ಸುಮಾರು 75.5 ಪ್ರತಿಶತದಷ್ಟು ಜನರು ಕೆಲಸ ಮಾಡುವ ವಯೋಮಾನದಲ್ಲಿದ್ದಾರೆ. ಈ ವಿಷಯದಲ್ಲಿ ನಾವು ಜಾಗತಿಕವಾಗಿ ನಾಲ್ಕನೇ ಸ್ಥಾನದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
ಒಂದು ಲೆಕ್ಕದಲ್ಲಿ ಟ್ರಾಫಿಕ್ ಸಮಸ್ಯೆ ಒಳ್ಳೆಯದು. ಏಕೆಂದರೆ, ಇದು ನಾವು ಬೆಳೆಯುತ್ತಿದ್ದೇವೆ ಎಂಬುದನ್ನು ತೋರಿಸುತ್ತದೆ ಎಂದು ಸಚಿವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತಿರುವುದರಿಂದ ದೇಶದಾದ್ಯಂತ ಜನರು ವಲಸೆ ಬರುವುದು ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಗಣನೀಯ ಏರಿಕೆ
ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿರುವುದನ್ನು ಸಚಿವರು ಉಲ್ಲೇಖಿಸಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಸುಮಾರು 82 ಲಕ್ಷ ದ್ವಿಚಕ್ರ ವಾಹನಗಳು ಮತ್ತು 25 ಲಕ್ಷ ನಾಲ್ಕು ಚಕ್ರ ವಾಹನಗಳು ಸೇರಿ ಒಟ್ಟು 1.2 ಕೋಟಿ ನೋಂದಾಯಿತ ವಾಹನಗಳಿವೆ.
"ವಾಹನಗಳ ಸಂಖ್ಯೆಯು ಟ್ರಾಫಿಕ್ ಸಮಸ್ಯೆಗೆ ಮೂಲ ಕಾರಣವಾಗಿದ್ದು, ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ" ಎಂದು ಸಚಿವರು ಒಪ್ಪಿಕೊಂಡಿದ್ದಾರೆ. ಒಟ್ಟಿನಲ್ಲಿ, ಬೆಂಗಳೂರಿನ ಟ್ರಾಫಿಕ್ ಅನ್ನು 'ಪ್ರಗತಿಯ ಸಂಕೇತ' ಎಂದು ಬಣ್ಣಿಸಿರುವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
