ಕನ್ಹೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ನಿಷೇಧ

ವಿಜಯಪುರ: ಕನ್ಹೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿವಾದಾತ್ಮಕ ಹೇಳಿಕೆಗಳಿಂದಾಗಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಸ್ವಾಮೀಜಿಗಳು ಬಸವ ಸಂಸ್ಕೃತಿ ಅಭಿಯಾನ ಮತ್ತು ಲಿಂಗಾಯತ ಮಠಾಧೀಪತಿಗಳ ವಿರುದ್ಧ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳನ್ನು ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದರು.

ಮಹಾರಾಷ್ಟ್ರದ ಜತ್ತ ಜಿಲ್ಲೆಯ ಬೀಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ 'ಬಸವ ಸಂಸ್ಕೃತಿ ಅಭಿಯಾನ' ಮತ್ತು ಅದರ ನೇತೃತ್ವ ವಹಿಸಿದ್ದ ಮಠಾಧೀಶರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರು. ಸ್ವಾಮೀಜಿಗಳ ಹೇಳಿಕೆ ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ವಿಜಯಪುರ, ಬಸವಕಲ್ಯಾಣ, ಕೂಡಲಸಂಗಮ, ಬೆಳಗಾವಿ, ದಾವಣಗೆರೆ, ಬೀದರ, ಗದಗ ಸೇರಿದಂತೆ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಅಕ್ಟೋಬರ್ 16 ಮತ್ತು 17 ರಂದು ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆಯಲಿರುವ ಸಮರ್ಥ ಸದ್ಗುರು ಸಿದ್ದರಾಮೇಶ್ವರ ಮಹಾರಾಜರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಕನ್ಹೇರಿ ಸ್ವಾಮೀಜಿಗಳು ಪಾಲ್ಗೊಳ್ಳುವ ಸಾಧ್ಯತೆ ಇತ್ತು. ಆದರೆ, ಅವರ ಭೇಟಿಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಮತ್ತು ಕಾರ್ಯಕ್ರಮಕ್ಕೆ ಅಡ್ಡಿಯಾಗುವ ಸಾಧ್ಯತೆಯನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ.

ಪೊಲೀಸ್ ಇಲಾಖೆಯ ಮನವಿ ಮೇರೆಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದು, ಅಕ್ಟೋಬರ್ 16 ರಿಂದ ಡಿಸೆಂಬರ್ 14 ರವರೆಗೆ (ಎರಡು ತಿಂಗಳ ಕಾಲ) ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳು ಬಸವನಬಾಗೇವಾಡಿ ಸೇರಿದಂತೆ ಸಂಪೂರ್ಣ ವಿಜಯಪುರ ಜಿಲ್ಲೆಯನ್ನು ಪ್ರವೇಶಿಸುವುದನ್ನು ನಿರ್ಬಂಧಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು