ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್

ಕೊಪ್ಪಳ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ (CM) ಬದಲಾವಣೆ ಕುರಿತು ಬಹಿರಂಗ ಹೇಳಿಕೆ ನೀಡುತ್ತಿರುವವರ ವಿರುದ್ಧ ಶಿಸ್ತುಪಾಲನಾ ಸಮಿತಿಯು ನೋಟಿಸ್ ನೀಡಿ ಎಚ್ಚರಿಕೆ ನೀಡುತ್ತಿದ್ದರೂ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಮತ್ತೆ ಈ ವಿಷಯದ ಕುರಿತು ಹೇಳಿಕೆ ನೀಡಿ ಸದ್ದು ಮಾಡಿದ್ದಾರೆ. ಈ ಹಿಂದೆ, ಡಿ.ಕೆ.ಶಿವಕುಮಾರ್ (DK Shivakumar) ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿಕೆ ನೀಡಿ ಸ್ವತಃ ಡಿಕೆಶಿಯವರ ಕೆಂಗಣ್ಣಿಗೆ ಗುರಿಯಾಗಿದ್ದ ಇಕ್ಬಾಲ್ ಹುಸೇನ್, ಈಗ ತಮ್ಮ ನಿಲುವಿಗೆ ಬದ್ಧರಾಗಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ. ಇದು ನನ್ನ ವೈಯಕ್ತಿಕ ಅಭಿಲಾಷೆ ಮತ್ತು ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ನನ್ನ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್ (Congress High Command) ಅವರಿಗೂ ತಿಳಿಸಿದ್ದೇನೆ. ನನ್ನ ಈ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷವಾಗಿದ್ದು, ಈ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದರು.

ನಾನು ನನ್ನ ಅನಿಸಿಕೆ, ಆಸೆ, ಮತ್ತು ಅಭಿಪ್ರಾಯವನ್ನು ಮಾತ್ರ ಹೇಳಿದ್ದೇನೆ. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ. ಈ ಕುರಿತು ಪದೇ ಪದೇ ಪ್ರಶ್ನಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು